ಪ್ರವಾಸಿ ದೋಣಿ ದುರಂತ: ಮತ್ತೋರ್ವ ಯುವತಿ ಮೃತ್ಯು, ಮೃತರ ಸಂಖ್ಯೆ ಮೂರಕ್ಕೆ ಏರಿಕೆ
ಉಡುಪಿ: ಕೋಡಿ ಕನ್ಯಾನ ಗ್ರಾಮದ ಕೋಡಿಬೆಂಗ್ರೆ ಅಳಿವೆಬಾಗಿಲು ಬಳಿ ನಡೆದ ಪ್ರವಾಸಿ ದೋಣಿ ದುರಂತದಲ್ಲಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮೈಸೂರಿನ ದಿಶಾ (26) ಮಣಿಪಾಲ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರಿಂದ ಈ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ಘಟನೆಯಲ್ಲಿ ತೀವ್ರವಾಗಿ ಅಸ್ವಸ್ಥಗೊಂಡು ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧರ್ಮರಾಜ (26) ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ದುರಂತದಲ್ಲಿ ಚಾಮರಾಜನಗರದ ಜಿಲ್ಲೆಯ ಹರವೆ ಗ್ರಾಮದ ಶಂಕರಪ್ಪ(27) ಹಾಗೂ ಚಾಮರಾಜನಗರ ಜಿಲ್ಲೆಯ ನರಸೀಪುರ ತಾಲೂಕಿನ ಮೂಗೂರು ನಿವಾಸಿ ಸಿಂಧು (25) ಸೋಮವಾರ ಮೃತಪಟ್ಟಿದ್ದರು.
ಮೃತಪಟ್ಟವರು ಹಾಗೂ ಗಾಯಗೊಂಡವರು ಮೈಸೂರಿನ ಗೋಲ್ಡ್ ಕ್ರೆಸ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಖಾಸಗಿ ಕಂಪನಿಯ ಉದ್ಯೋಗಿಗಳಾಗಿದ್ದಾರೆ.
ಮೈಸೂರಿನಿಂದ ಎರಡು ದಿನಗಳ ಪ್ರವಾಸಕ್ಕೆ ಬಸ್ಸಿನಲ್ಲಿ ಬಂದಿದ್ದ ಒಟ್ಟು 28 ಮಂದಿಯ ತಂಡ ಮಲ್ಪೆ ಕದಿಕೆ ಪ್ರದೇಶದ ಹೋಂಸ್ಟೇಯೊಂದರಲ್ಲಿ ತಂಗಿತ್ತು. ಸೋಮವಾರ ದೋಣಿಯಲ್ಲಿ ವಿಹಾರಕ್ಕೆ ತೆರಳಿದ್ದ ವೇಳೆ ದೋಣಿ ಅಕಸ್ಮಿಕವಾಗಿ ನೀರಿನಲ್ಲಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.
ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
