ಉಡುಪಿ: ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ಗಡಿಪಾರು
ಉಡುಪಿ: ಜಿಲ್ಲೆಯ ರೌಡಿ ಶೀಟರ್ ಸಹಿತ ಇಬ್ಬರು ಆರೋಪಿಗಳ ವಿರುದ್ಧ ಉಡುಪಿ ಜಿಲ್ಲಾ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ಮಾ.26ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಳತ್ತೂರು ಗ್ರಾಮದ ಸೂರ್ಯ ಗುಡ್ಡೆಯ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಸುಹಾನ್ ಪೂಜಾರಿ ಗಡಿಪಾರು ಮಾಡಲಾದ ಆರೋಪಿಗಳು.
ನೌಫಿಲ್ ವಿರುದ್ಧ 5 ಪ್ರಕರಣಗಳು ದಾಖಲಾಗಿದ್ದು, ಶಿರ್ವ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಅದೇ ರೀತಿ ಸುಹಾನ್ ಪೂಜಾರಿ ವಿರುದ್ಧ 4 ಪ್ರಕರಣಗಳು ದಾಖಲಾಗಿವೆ. ನೌಫಿಲ್ನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಸುಹಾನ್ ಪೂಜಾರಿಯನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.













