ಉಡುಪಿ ಉಚ್ಚಿಲ ದಸರಾ: ಆಕರ್ಷಕ ವಿದ್ಯುದ್ದೀಪಾಲಂಕಾರಕ್ಕೆ ಚಾಲನೆ
ಪಡುಬಿದ್ರಿಯಿಂದ ಕಾಪು ಸಮುದ್ರ ತೀರದವರೆಗೆ ಕಣ್ಮನ ಸೆಳೆಯುವ ದೀಪಾಲಂಕಾರ
ಉಚ್ಚಿಲ: ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವ-2026ರ ಅಂಗವಾಗಿ ನಿರ್ಮಿಸಲಾಗಿರುವ ಆಕರ್ಷಕ ವಿದ್ಯುದ್ದೀಪಾಲಂಕಾರವನ್ನು ದಸರಾ ಉತ್ಸವದ ರೂವಾರಿ ನಾಡೋಜ ಡಾ. ಜಿ. ಶಂಕರ್ ಅವರು ಶನಿವಾರ ಉದ್ಘಾಟಿಸಿದರು.

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಭಕ್ತಾಭಿಮಾನಿಗಳು ಹಾಗೂ ಮೊಗವೀರ ಸಮಾಜದ ಸಹಕಾರ ಮತ್ತು ಸಹಯೋಗದೊಂದಿಗೆ ಈ ಬಾರಿಯ ಉಚ್ಚಿಲ ದಸರಾ ಮಹೋತ್ಸವವನ್ನು ಆಯೋಜಿಸಲಾಗಿದೆ. ಉತ್ಸವದ ಅಂಗವಾಗಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪರಿಸರದಿಂದ ಪಡುಬಿದ್ರಿ ಮೂಲಕ ಕಾಪು ಸಮುದ್ರ ತೀರದವರೆಗೆ ನಿರ್ಮಿಸಲಾಗಿರುವ ಆಕರ್ಷಕ ವಿದ್ಯುದ್ದೀಪಾಲಂಕಾರವು ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಬಣ್ಣಬಣ್ಣದ ದೀಪಗಳಿಂದ ಕಂಗೊಳಿಸುತ್ತಿರುವ ಈ ಮಾರ್ಗವು ದಸರಾ ಸಂಭ್ರಮಕ್ಕೆ ವಿಶೇಷ ಮೆರುಗು ನೀಡಿದೆ.
ವಿದ್ಯುದ್ದೀಪಾಲಂಕಾರದ ಉದ್ಘಾಟನಾ ಸಮಾರಂಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಉಡುಪಿ ಉಚ್ಚಿಲ ದಸರಾ ಸಮಿತಿಯ ಅಧ್ಯಕ್ಷ ವಿನಯ ಕರ್ಕೇರ, ಮೋಹನ್ ಬೇಂಗ್ರೆ, ಗಿರಿಧರ ಸುವರ್ಣ, ಮನೋಜ್ ಕಾಂಚನ್, ಶರಣ್ ಕುಮಾರ್ ಮಟ್ಟು, ಸತೀಶ್ ಕುಂದರ್ ಮಲ್ಪೆ, ವಿಶ್ವಾಸ್ ಅಮೀನ್, ಸತೀಶ್ ಅಮೀನ್ ಪಡುಕೆರೆ ಹಾಗೂ ರತ್ನಾಕರ ಸಾಲ್ಯಾನ್ ಮಲ್ಪೆ ಉಪಸ್ಥಿತರಿದ್ದರು.
ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ಉಚ್ಚಿಲ ದಸರಾ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ.












