ಉಡುಪಿ ನಗರಸಭೆ ಮೂಲಸೌಕರ್ಯ ಅಭಿವೃದ್ಧಿಗೆ ₹30 ಕೋಟಿ ವಿಶೇಷ ಅನುದಾನಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯರಿಗೆ ಯಶ್ಪಾಲ್ ಸುವರ್ಣ ಮನವಿ
ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ₹30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿದರು.
ಜಿಲ್ಲಾ ಕೇಂದ್ರವಾಗಿರುವ ಉಡುಪಿ ನಗರವು ಶೈಕ್ಷಣಿಕ, ಧಾರ್ಮಿಕ, ವೈದ್ಯಕೀಯ, ಬ್ಯಾಂಕಿಂಗ್ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪ್ರಮುಖ ಸ್ಥಾನ ಹೊಂದಿದ್ದು, ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ಮೂಲಸೌಕರ್ಯಗಳ ಮೇಲಿನ ಒತ್ತಡವೂ ಹೆಚ್ಚಾಗಿದೆ ಎಂದು ಶಾಸಕ ಸುವರ್ಣ ಸಚಿವರ ಗಮನಕ್ಕೆ ತಂದರು.
ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ರಸ್ತೆ ನಿರ್ಮಾಣ ಮತ್ತು ಅಭಿವೃದ್ಧಿ, ರಸ್ತೆ ನಿರ್ವಹಣೆ, ಚರಂಡಿ ಹಾಗೂ ಮಳೆನೀರು ಹರಿವಿನ ವ್ಯವಸ್ಥೆ, ಕಾಲುಸಂಕ, ತಡೆಗೋಡೆ, ದಾರಿದೀಪ ಸೇರಿದಂತೆ ಹಲವು ಮೂಲಸೌಕರ್ಯ ಕಾಮಗಾರಿಗಳ ಅಗತ್ಯವಿದೆ. ವಿಶೇಷವಾಗಿ ಮಳೆಗಾಲದಲ್ಲಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಚರಂಡಿ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಅಗತ್ಯವಿರುವ ಪ್ರದೇಶಗಳಲ್ಲಿ ತಡೆಗೋಡೆ ಮತ್ತು ಕಾಲುಸಂಕಗಳನ್ನು ನಿರ್ಮಿಸುವುದು ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಅಗತ್ಯವಾಗಿದೆ ಎಂದು ತಿಳಿಸಿದರು.
ಉಡುಪಿ ನಗರವು ದಿನದಿಂದ ದಿನಕ್ಕೆ ವಿಸ್ತರಿಸುತ್ತಿದ್ದು, ಜನಸಂಖ್ಯೆ ಹಾಗೂ ನಗರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ಸೀಮಿತ ಅನುದಾನದಲ್ಲಿ ಎಲ್ಲಾ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವುದು ಕಷ್ಟಕರವಾಗಿದೆ. ನಗರದ ವಿವಿಧ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಾರ್ವಜನಿಕರಿಂದಲೂ ನಿರಂತರ ಬೇಡಿಕೆಗಳು ಬರುತ್ತಿದ್ದು, ಅವುಗಳನ್ನು ಆದ್ಯತೆಯ ಆಧಾರದ ಮೇಲೆ ಈಡೇರಿಸಲು ವಿಶೇಷ ಅನುದಾನದ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ವ್ಯಾಪ್ತಿಯ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕನಿಷ್ಠ ₹30 ಕೋಟಿ ವಿಶೇಷ ಅನುದಾನವನ್ನು ತುರ್ತಾಗಿ ಮಂಜೂರು ಮಾಡಿ, ಉಡುಪಿ ನಗರದ ಮೂಲಸೌಕರ್ಯವನ್ನು ಬಲಪಡಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಅವರು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.













