ಬಿಸಿ ರೋಡ್ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ
ಬಂಟ್ವಾಳ: ಬಂಟ್ವಾಳದ ಬಿಸಿ ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಬಳಿ ಬಸ್ಗಾಗಿ ಕಾಯುತ್ತಿದ್ದ ಯುವತಿಯೊಬ್ಬರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಗುರುವಾರ ವರದಿಯಾಗಿದೆ.

ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ (21) ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ ಯುವತಿ ಸಂಜೆ ಸುಮಾರು 6 ಗಂಟೆ ವೇಳೆಗೆ ಬಿಸಿ ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಬಳಿ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಕೂಡಲೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಥಾಧಿಕಾರಿ ಡಾ. ಅರುಣ್ ಕೆ, ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಪ್ರಾಥಮಿಕ ವಿಚಾರಣೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.












