ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಮೃತರ ಸಂಖ್ಯೆ 7ಕ್ಕೆ ಏರಿಕೆ
ಬೆಂಗಳೂರು : ಅಭಿಮಾನಿಗಳ 18 ವರ್ಷಗಳ ಕನಸನ್ನು ನನಸು ಮಾಡಿರುವ ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಹಿನ್ನಲೆಯಲ್ಲಿ ಆರ್‌ಸಿಬಿ ಆಟಗಾರರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ.
ಟ್ರೋಫಿ ಗೆದ್ದ ತಂಡವನ್ನು ನೋಡಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದೆ.
ಈ ವೇಳೆ ಬಾಲಕನೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಅಲ್ಲದೇ ಘಟನೆಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಾಲ್ತುಳಿತದಲ್ಲಿ ಈವರೆಗೆ 7 ಮಂದಿ ಮೃತಪಟಿದ್ದಾರೆ ಎನ್ನಲಾಗುತ್ತಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.