ಕಾನೂನುಬಾಹಿರ ಚಟುವಟಿಕೆ ಎಸಗುವವರ, ಉತ್ತೇಜನ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಿ – ದಿನೇಶ್ ಗುಂಡೂರಾವ್
- ದ.ಕ. ಜಿಲ್ಲಾಧಿಕಾರಿ, ಪೊಲೀಸರ ಜತೆ ಚರ್ಚೆ ಸ್ಪೀಕರ್, ಉಸ್ತುವಾರಿ ಸಚಿವರಿಂದ ವೀಡಿಯೊ ಕಾನ್ಫರೆನ್ಸ್ ಸಭೆ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ವಿಧಾನ ಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.
ದ.ಕ. ಜಿಲ್ಲೆಯಲ್ಲಿ ಇತ್ತಿಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಬಗ್ಗೆ ಚರ್ಚೆ ನಡೆಸಿದ ಸಚಿವರು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಯಾವುದೇ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ. ಸರಕಾರ ನಿಮ್ಮ ಜೊತೆ ಇದೆ. ಕಾನೂನು ಬಾಹಿರ ಚಟುವಟಿಕೆ ನಡೆಸುವವರು ಹಾಗೂ ಅದಕ್ಕೆ ಉತ್ತೇಜನ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳೂರಿನಲ್ಲಿ ನೂತನ ಜಿಲ್ಲಾಧಿಕಾರಿಗಳ ಕಟ್ಟಡ ಉದ್ಘಾಟನೆ ಕುರಿತಂತೆ ಇದೇ ವೇಳೆ ಚರ್ಚೆ ನಡೆಸಲಾಯಿತು. ಮೇ 16 ರಂದು ನೂತನ ಜಿಲ್ಲಾಧಿಕಾರಿ ಕಚೇರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಅಗತ್ಯ ತಯಾರಿಗಳನ್ನು ನಡೆಸುವಂತೆ ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಜಿಪಂ ಸಿಇಒ ಡಾ. ಆನಂದ್ ಮೊದಲಾದವರು ಭಾಗವಹಿಸಿದ್ದರು.