ಪುತ್ತೂರು ತಹಶೀಲ್ದಾರ್ ವಿರುದ್ಧ ಲಂಚ ಪ್ರಕರಣ: ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

Spread the love

ಪುತ್ತೂರು ತಹಶೀಲ್ದಾರ್ ವಿರುದ್ಧ ಲಂಚ ಪ್ರಕರಣ: ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

ಮಂಗಳೂರು: ಭ್ರಷ್ಟಾಚಾರ ವಿರೋಧಕ ಕಾಯ್ದೆಯಡಿ ದಾಖಲಾಗಿರುವ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ತೂರು ತಾಲೂಕು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರ ಜಾಮೀನು ಅರ್ಜಿಯನ್ನು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಸೆಪ್ಟೆಂಬರ್ 25ರಂದು ತಿರಸ್ಕರಿಸಿದೆ.

ಪಿರ್ಯಾದಿದಾರರೊಬ್ಬರ ಜಮೀನಿನ ನಿರಾಕ್ಷೇಪಣಾ ಪತ್ರಕ್ಕೆ ಸಂಬಂಧಿಸಿದಂತೆ 28 ಆಗಸ್ಟ್ 2025ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೂಡಲಗಿ ಹಾಗೂ ಪುತ್ತೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಎಸ್.ಎಮ್. ವಿರುದ್ಧ ಅಪರಾಧ ಕ್ರಮಾಂಕ 09/2025 ಅಡಿ ಪ್ರಕರಣ ದಾಖಲಾಗಿತ್ತು.

ಟ್ರ್ಯಾಪ್ ಕಾರ್ಯಾಚರಣೆ ವೇಳೆ ಸುನಿಲ್ ಕುಮಾರ್ ಅವರನ್ನು ಅಧಿಕಾರಿಗಳು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ ಕೂಡಲಗಿ ಕಾರ್ಯಾಚರಣೆಯ ಸಮಯದಲ್ಲಿ ತಲೆಮರೆಸಿಕೊಂಡಿದ್ದರು.

ಆರೋಪಿತ ಕೂಡಲಗಿ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ, ನ್ಯಾಯಾಧೀಶೆ ಸುನೀತಾ ಎಸ್.ಜಿ. ವಿಚಾರಣೆ ನಡೆಸಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಈ ಪ್ರಕರಣದಲ್ಲಿ ಲೋಕಾಯುಕ್ತ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದಿಸಿದರು ಎಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments