ಪೋಕ್ಸೋ ಪ್ರಕರಣ: ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ, ₹35,000 ದಂಡ
ಮಂಗಳೂರು: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 12/2020ರಂತೆ ಕಲಂ 354(A)(1), 506 ಐಪಿಸಿ ಹಾಗೂ ಕಲಂ 8 ಪೋಕ್ಸೋ ಕಾಯ್ದೆ-2012ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಕಡಬ ತಾಲೂಕಿನ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಪ್ರಕರಣದ ಆರೋಪಿಯಾಗಿದ್ದು, ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿ ಅವರು ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿ, ಐದು ವರ್ಷಗಳ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹35,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ಅಂದಿನ ತನಿಖಾಧಿಕಾರಿ ಹಾಗೂ ಸುಳ್ಯ ವೃತ್ತದ ಪೊಲೀಸ್ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅವರು ಪ್ರಕರಣದ ವಿಚಾರಣೆಯಲ್ಲಿ ಸಮರ್ಥವಾಗಿ ವಾದ ಮಂಡಿಸಿದರು.












