ಬ್ರಹ್ಮಾವರ ಪ್ರಕರಣ: ಸೂಕ್ತ ತನಿಖಾಧಿಕಾರಿಗೆ ವರ್ಗಾವಣೆ – ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟನೆ
ಉಡುಪಿ: 2014ರಲ್ಲಿ ನಡೆದ ಅಪಘಾತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇಳಿ ಬರುತ್ತಿರುವ ಆರೋಪಗಳ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಿಂದ ತನಿಖೆಯನ್ನು ಬೇರೆ ಸೂಕ್ತ ತನಿಖಾಧಿಕಾರಿಗೆ ವರ್ಗಾಯಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸ್ಪಷ್ಟನೆ ನೀಡಿದ್ದಾರೆ
2014ರಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆಶಿಕ್ ವಿರುದ್ಧ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಹಾಗೂ ದಂಡದ ಮೊತ್ತವನ್ನು ಪಾವತಿಸದೆ, ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಮಾನ್ಯ ನ್ಯಾಯಾಲಯವು ಆರೋಪಿಯನ್ನು ದಸ್ತಗಿರಿ ಮಾಡಿ ಉಡುಪಿ ಪಿಸಿಜೆ ಮತ್ತು ಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಮಲ್ಪೆ ಪೊಲೀಸ್ ಠಾಣೆಗೆ ಸೂಚನಾ ಪತ್ರ ಹೊರಡಿಸಿತ್ತು.
ನ್ಯಾಯಾಲಯದ ಆದೇಶದಂತೆ ವಾರಂಟ್ ಜಾರಿಗೆ ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿ ಬ್ರಹ್ಮಾವರದಲ್ಲಿರುವ ಆರೋಪಿಯ ಮನೆಗೆ ತೆರಳಿದ ಸಂದರ್ಭ, ಅಲ್ಲಿದ್ದ ಇಬ್ಬರು ಮಹಿಳೆಯರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎನ್ನಲಾದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಘಟನೆಗೆ ಸಂಬಂಧಿಸಿ ಕಳೆದ ಎರಡು ದಿನಗಳಿಂದ ಬಿಲ್ಲವ ಸಮಾಜದ ಸಂಘಟನೆಗಳು, ಚುನಾಯಿತ ಪ್ರತಿನಿಧಿಗಳು, ಮಹಿಳಾ ಸಂಘಟನೆಗಳ ಮುಖಂಡರು ಹಾಗೂ ವಿವಿಧ ರಾಜಕೀಯ ಪಕ್ಷಗಳ ನಾಯಕರು ಘಟನೆಯ ಕುರಿತು ಅನುಮಾನ ಮತ್ತು ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಬ್ರಹ್ಮಾವರ ಪೊಲೀಸ್ ಠಾಣೆಯಿಂದ ತನಿಖೆಯನ್ನು ಬೇರೆ ಸೂಕ್ತ ತನಿಖಾಧಿಕಾರಿಗೆ ವರ್ಗಾಯಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಇದಲ್ಲದೆ, ಸಂತ್ರಸ್ತ ಮಹಿಳೆಯರು ಇಲಾಖಾ ಸಿಬ್ಬಂದಿಯ ವಿರುದ್ಧ ಮಾಡಿರುವ ಆರೋಪಗಳ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಪ್ರತ್ಯೇಕ ವಿಚಾರಣೆ ನಡೆಸಲಾಗುವುದು. ತನಿಖೆಯಲ್ಲಿ ಲೋಪಗಳು ಕಂಡುಬಂದಲ್ಲಿ ಸಂಬಂಧಪಟ್ಟ ಸಿಬ್ಬಂದಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ನ್ಯಾಯ ಒದಗಿಸುವ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಲ ಅಥವಾ ಅನುಮಾನ ಪಡುವ ಅವಶ್ಯಕತೆ ಇಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.













