ಮಂಗಳೂರು ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ ಶಂಕೆ: ಪ್ರಥಮ ವರ್ಷದ ವಿದ್ಯಾರ್ಥಿ ಮೇಲೆ ಹಲ್ಲೆ, ಐವರು ವಶಕ್ಕೆ
ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ನಡೆದಿರುವ ಶಂಕಿತ ರ್ಯಾಗಿಂಗ್ ಪ್ರಕರಣದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಗುಜ್ಜರಕೆರೆ ಸಮೀಪ ಈ ಘಟನೆ ನಡೆದಿದ್ದು, ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಆದರ್ಶ್ ಹಾಗೂ ಜೆ. ಖಾದರ್ ಅವರ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಗಾಯಾಳು ವಿದ್ಯಾರ್ಥಿಗಳ ಹೇಳಿಕೆಯ ಪ್ರಕಾರ, ಕಪ್ಪು ಬಣ್ಣದ ಶೂ ಧರಿಸಿದ್ದ ವಿಚಾರಕ್ಕೆ ಹಿರಿಯ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಬಳಿಕ ಹಲ್ಲೆಗೆ ತಿರುಗಿದೆ. ಈ ವೇಳೆ ಹಿರಿಯ ವಿದ್ಯಾರ್ಥಿಗಳು ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಯಿಂದ ಒಬ್ಬ ವಿದ್ಯಾರ್ಥಿಯ ಕುತ್ತಿಗೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಕುತ್ತಿಗೆಯ ಮೂಳೆ ಮುರಿದಿರುವುದಾಗಿ ದೃಢಪಡಿಸಿದ್ದು, ವಿದ್ಯಾರ್ಥಿಗೆ ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ತೆರಳಿ ಗಾಯಾಳು ವಿದ್ಯಾರ್ಥಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎಫ್ಐಆರ್ನಲ್ಲಿ ರ್ಯಾಗಿಂಗ್ ನಿಷೇಧ ಕಾಯ್ದೆಯ ವಿಧಿಗಳನ್ನು ಸೇರಿಸಲಾಗಿದೆ. ಈ ಸಂಬಂಧ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ, ಪ್ರಾಥಮಿಕ ಮಾಹಿತಿಯ ಪ್ರಕಾರ ಇದು ರ್ಯಾಗಿಂಗ್ ಪ್ರಕರಣವೆಂದು ಕಂಡುಬಂದಿದೆ. ಗಾಯಾಳು ವಿದ್ಯಾರ್ಥಿಗಳ ಹೇಳಿಕೆಯನ್ನು ದಾಖಲಿಸಲಾಗುತ್ತಿದ್ದು, ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಸಮಗ್ರ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪ್ರಕರಣದ ನಿಖರ ಹಿನ್ನೆಲೆ ಹಾಗೂ ಆರೋಪಿಗಳ ಪಾತ್ರವನ್ನು ತನಿಖೆ ಮೂಲಕ ಸ್ಪಷ್ಟಪಡಿಸಲಾಗುವುದು. ತನಿಖಾ ವರದಿಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.













