ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

Spread the love

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

  • 59 ಎನ್‌ಡಿಪಿಎಸ್ ಪ್ರಕರಣಗಳ ಜಪ್ತಿ ಮಾದಕ ವಸ್ತುಗಳನ್ನು ವೈಜ್ಞಾನಿಕ ವಿಧಾನದಲ್ಲಿ ವಿಲೇವಾರಿ

ಮಂಗಳೂರು: ಮಾದಕ ವಸ್ತುಗಳ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಮಂಗಳೂರು ನಗರ ಪೊಲೀಸರು, ವಿವಿಧ ಎನ್‌ಡಿಪಿಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಬುಧವಾರ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ನಾಶಪಡಿಸಿದರು.

ಮಂಗಳೂರು ನಗರದ ಮುಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ Ramky Energy and Environment Ltd. (Re Sustainability Healthcare Solutions Ltd.) ಸಂಸ್ಥೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ, ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 59 ಎನ್‌ಡಿಪಿಎಸ್ ಪ್ರಕರಣಗಳಿಗೆ ಸಂಬಂಧಿಸಿದ ಮಾದಕ ವಸ್ತುಗಳನ್ನು ಡ್ರಗ್ ಡಿಸ್ಪೋಸಲ್ ಕಮಿಟಿ ಸಮಕ್ಷಮ ಸುಟ್ಟು ನಾಶಪಡಿಸಲಾಯಿತು.

YouTube player

ನಾಶಪಡಿಸಲಾದ ಮಾದಕ ವಸ್ತುಗಳಲ್ಲಿ 450 ಕೆ.ಜಿ. ಗಾಂಜಾ, 43 ಕೆ.ಜಿ. 260 ಗ್ರಾಂ ಎಂ.ಡಿ.ಎಂ.ಎ., 80 ಗ್ರಾಂ ಚರಸ್, 880 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ 1 ಕೆ.ಜಿ. 200 ಗ್ರಾಂ ಭಾಂಗ್ ಸೇರಿದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ ಸುಮಾರು ₹82 ಕೋಟಿ ಎಂದು ಪೊಲೀಸರು ತಿಳಿಸಿದ್ದಾರೆ.

ನಾಶಪಡಿಸಿದ ಮಾದಕ ವಸ್ತುಗಳಲ್ಲಿ 2024ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸುಮಾರು ₹75 ಕೋಟಿ ಮೌಲ್ಯದ 37 ಕೆ.ಜಿ. ಎಂ.ಡಿ.ಎಂ.ಎ., 2025ರಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ₹4.47 ಕೋಟಿ ಮೌಲ್ಯದ ಸುಮಾರು 4 ಕೆ.ಜಿ. ಎಂ.ಡಿ.ಎಂ.ಎ., ಕೊಣಾಜೆ ಪೊಲೀಸ್ ಠಾಣೆಯ ₹20 ಲಕ್ಷ ಮೌಲ್ಯದ 106 ಕೆ.ಜಿ. ಗಾಂಜಾ ಹಾಗೂ ಮೂಡಬಿದ್ರೆ ಪೊಲೀಸ್ ಠಾಣೆಯ ₹36 ಲಕ್ಷ ಮೌಲ್ಯದ 111 ಕೆ.ಜಿ. ಗಾಂಜಾ ಪ್ರಮುಖವಾಗಿವೆ.

ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ 2026ನೇ ಸಾಲಿನಲ್ಲಿ ಇದುವರೆಗೆ 87 ಎನ್‌ಡಿಪಿಎಸ್ ಪ್ರಕರಣಗಳನ್ನು ದಾಖಲಿಸಲಾಗಿದ್ದು, 157 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗಳಲ್ಲಿ 148 ಕೆ.ಜಿ. 615 ಗ್ರಾಂ ಗಾಂಜಾ, 7 ಕೆ.ಜಿ. 165 ಗ್ರಾಂ ಎಂ.ಡಿ.ಎಂ.ಎ., 1 ಕೆ.ಜಿ. 705 ಗ್ರಾಂ ಹೈಡ್ರೋ ವೀಡ್ ಗಾಂಜಾ ಸೇರಿದಂತೆ ಒಟ್ಟು ₹8.18 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದೇ ಅವಧಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 463 ಮಂದಿಯ ವಿರುದ್ಧ 356 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಮಾದಕ ವಸ್ತುಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಸಾರ್ವಜನಿಕರಿಗೆ ದೊರೆತಲ್ಲಿ, ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಕ್ಯೂಆರ್ ಕೋಡ್, 112 ಅಥವಾ 9480802321 ಸಂಖ್ಯೆಗೆ ಮಾಹಿತಿ ನೀಡಿ ಸಹಕರಿಸುವಂತೆ ಮಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ.


Spread the love
Subscribe
Notify of

0 Comments