ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ₹2.50 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಪ್ರದೇಶದ ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವಾದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 71/2026, ಕಲಂ 303(2) ಬಿಎನ್ಎಸ್-2023ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ತನಿಖೆಯ ವೇಳೆ ಬಂಟ್ವಾಳ ಬಾಳ್ತಿಲ ನಿವಾಸಿ ಕುಮಾರಿ ಪೃಥ್ವಿ (18) ಹಾಗೂ ಮಂಗಳೂರು ಸುರತ್ಕಲ್ ನಿವಾಸಿ ಕಿಶಾನ್ (22) ಎಂಬವರನ್ನು ಬಂಧಿಸಲಾಗಿದೆ.
ಬಂಧಿತರಿಂದ ಒಟ್ಟು ₹2,50,000 ಮೌಲ್ಯದ 21 ಗ್ರಾಂ ಚಿನ್ನಾಭರಣ ಹಾಗೂ ₹600 ನಗದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ಪತ್ತೆ ಮತ್ತು ಬಂಧನ ಕಾರ್ಯಾಚರಣೆಯಲ್ಲಿ ಪ್ರಕರಣದ ತನಿಖಾಧಿಕಾರಿ ಎಎಸ್ಐ ನವೀನ್ ನೇತೃತ್ವದಲ್ಲಿ ಹೆಡ್ ಕಾನ್ಸ್ಟೇಬಲ್ಗಳಾದ ಸುರೇಶ್ ಕುಮಾರ್, ರಾಜೇಶ್, ರಕ್ಷೀತ್, ಕಾನ್ಸ್ಟೇಬಲ್ಗಳಾದ ಬಸವರಾಜ ಕುಡಗುಂಟಿ, ನಾಗನಾಥ ಹಾಗೂ ಮಹಿಳಾ ಪೊಲೀಸ್ ಸಿಬ್ಬಂದಿಗಳಾದ ರೇವತಿ, ಭಾಗ್ಯಮ್ಮ ಮತ್ತು ಮಾಲಾಶ್ರೀ ಭಾಗವಹಿಸಿದ್ದರು.
ಜಿಲ್ಲಾ ಬೆರಳಚ್ಚು ಘಟಕದ ಸಚಿನ್ ಮತ್ತು ಉದಯ್, ಜಿಲ್ಲಾ ಗಣಕಯಂತ್ರ ವಿಭಾಗದ ದಿವಾಕರ್ ಹಾಗೂ ಸಂಪತ್ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಹಕರಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.













