ಮನೆ ಮನೆ ಭೇಟಿ ನೀಡುವ ಮೂಲಕ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ: ರಮೇಶ್ ಕಾಂಚನ್

Spread the love

ಮನೆ ಮನೆ ಭೇಟಿ ನೀಡುವ ಮೂಲಕ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ: ರಮೇಶ್ ಕಾಂಚನ್

ಉಡುಪಿ: ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಗೌರವಯುತ ಮತ್ತು ಸ್ವಾವಲಂಬಿ ಬದುಕು ಹೊಂದಬೇಕೆನ್ನುವ ಉದ್ದೇಶದಿಂದ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಕಳೆದ 2.5 ವರ್ಷಗಳಿಂದ ರಾಜ್ಯವ್ಯಾಪಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಯೋಜನೆಗಳ ಪ್ರಗತಿ ಪರಿಶೀಲಿಸಲು “ನಮ್ಮ ನಡೆ ವಾರ್ಡ್ ಕಡೆಗೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು.

ಅವರು ಇಂದು ನಗರದ ಪುರಭವನದಲ್ಲಿ ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಡುಪಿ ತಾಲೂಕು ಇವರ ವತಿಯಿಂದ ಆಯೋಜಿಸಲಾದ “ನಮ್ಮ ನಡೆ ವಾರ್ಡ್ ಕಡೆಗೆ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಗ್ಯಾರಂಟಿ ಯೋಜನೆಗಳು ಸಮದರ್ಶಿ ಮತ್ತು ಸಮಾವೇಶಿಯಾಗಿದ್ದು ಸಮಾಜದ ಬಡವರ್ಗವನ್ನು ಮೇಲೆತ್ತುವಲ್ಲಿ ತನ್ನದೇ ಆದ ಕೊಡುಗೆ ನೀಡುತ್ತಿದೆ. ಮನೆ ಮನೆಗೆ ಭೇಟಿ ನೀಡಿ ಯೋಜನೆಯ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸಲಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಲಾಭವನ್ನು ಪ್ರತಿಯೊಂದು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಅವರ ಈ ಕಾರ್ಯ ಅಭಿನಂದನಾರ್ಹ ಎಂದ ಅವರು, ಯೋಜನೆಯ ಲಾಭ ಎಲ್ಲರಿಗೂ ಸಮಾನವಾಗಿ ದೊರೆತಾದ ಸರ್ಕಾರದ ಉದ್ದೇಶ ಈಡೇರಿಕೆಯಾಗುತ್ತದೆ ಎಂದರು.

ಗ್ಯಾರಂಟಿ ಯೋಜನೆ ಜನಸಾಮಾನ್ಯರ ಬದುಕಿನಲ್ಲಿ ಒಂದಲ್ಲಾ ಒಂದು ರೀತಿಯ ಬದಲಾವಣೆ, ಸುಧಾರಣೆ ತಂದಿರುವುದಲ್ಲದಲ್ಲದೆ ಆರ್ಥಿಕ ಸಂಚಲನವನ್ನು ಸೃಷ್ಠಿಸಿವೆ ಎಂದರು.

ಯೋಜನೆಗಳ ಸಮಿತಿ ಸದಸ್ಯ ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ಆರ್ಥಿಕ ಚೈತನ್ಯ ತುಂಬಿದೆ. ಪಂಚ ಗ್ಯಾರಂಟಿ ಯೋಜನೆಗಳು ಗಿನ್ನೆಸ್ ದಾಖಲೆ ನಿರ್ಮಿಸಿದ್ದು, ಜನರ ಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿವೆ. ಯೋಜನೆಗಳು ರಾಜ್ಯದ ಜಿಡಿಪಿಗೂ ಚೈತನ್ಯ ನೀಡಿದ್ದು ಆರ್ಥಿಕತೆಗೂ ಬಲ ನೀಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯಾ, ಉಡುಪಿ ತಾಲೂಕು ಉಪತಹಶೀಲ್ದಾರ್ ಐರಿನ್ ನೊರೊನ್ಹಾ, ಅನುಷ್ಠಾನ ಸಮಿತಿಯ ಸದಸ್ಯರಾದ ಅರ್ಚನಾ ದೇವಾಡಿಗ, ದಿನೇಶ್ ಜತ್ತನ್ನ, ಪಂಚ ಗ್ಯಾರಂಟಿ ಯೋಜನೆಯ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments