ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚನೆ: ದಿನೇಶ್ ಗುಂಡೂರಾವ್

Spread the love

ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚನೆ: ದಿನೇಶ್ ಗುಂಡೂರಾವ್

ಮಂಗಳೂರು: ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ್ಯ ಮತ್ತು ಆಘಾತಕಾರಿ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ., ಯಾರ ತುಷ್ಠೀಕರಣವೂ ಇಲ್ಲ. ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿಯವರು ಈಗಾಗಲೇ ಸುಹಾಸ್ ಪ್ರಕರಣವನ್ನು ರಾಜಕೀಯ ಮಾಡಲು ಹೊರಟಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡಲು ಹೊರಟಿರುವ ಬಿಜೆಪಿಯವರಿಗೆ ಒಂದು ಮಾತು. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ನಿಮ್ಮದು ಕೂಡ ಇದೆ. ದ್ವೇಷ ಹರಡುವ ಮೂಲಕ, ಪ್ರಚೋದಿಸುವ ಮೂಲಕ ಮಂಗಳೂರಿನಲ್ಲಿ ಶಾಂತಿ ಭಂಗ ಮಾಡುವ ದುಷ್ಟ ಕೆಲಸಕ್ಕೆ ಕೈ ಹಾಕಬೇಡಿ. ಜವಾಬ್ದಾರಿಯಿಂದ ವರ್ತಿಸಿ ಎಂದು ಉಸ್ತುವಾರಿ ಸಚಿವರು ಕಿವಿಮಾತು ಹೇಳಿದ್ದಾರೆ.

ಕೊಲೆಯಾದ ಸುಹಾಸ್ ಕುಟುಂಬಕ್ಕೆ ನ್ಯಾಯ ಕೊಡಿಸುವುದು ರಾಜ್ಯ ಸರಕಾರದ ಜವಾಬ್ದಾರಿ. ನಾವು ಕೇವಲ ಬಾಯಿ ಮಾತಿನಲ್ಲಿ ಕಠಿಣ ಕ್ರಮದ ಭರವಸೆ ನೀಡುವವರಲ್ಲ. ಬದಲಿಗೆ ಕಾನೂನಿನ ಅನುಸಾರ ಈ ಕೃತ್ಯ ಎಸಗಿದವರಿಗೆ ತಕ್ಕ ಪಾಠ ಕಲಿಸುವವರು. ಇದು ನಿಶ್ಚಿತ ಎಂದು ಹೇಳಿರುವ ಸಚಿವ ದಿನೇಶ್ ಗುಂಡೂರಾವ್, ಸುಹಾಸ್ ಅಗಲಿಕೆಯ ನೋವಿನಿಂದ ಬಳಲುತ್ತಿರುವ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments